ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಜನಸಾಮಾನ್ಯರಿಗೆ ಸಕಾಲದಲ್ಲಿ ಆಸ್ಪತ್ರೆಗಳಲ್ಲಿ ಪ್ರವೇಶ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಅಲ್ಲದೆ ಕೆಲ ಕೋವಿಡ್ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿದ್ದು, ಊಟ – ತಿಂಡಿ ಸಮರ್ಪಕವಾಗಿ ನೀಡುತ್ತಿಲ್ಲ. ಶೌಚಾಲಯಗಳು ಗಬ್ಬು ನಾರುತ್ತಿದ್ದರೂ ಕೇಳುವವರಿಲ್ಲ ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೂ ಕೊರೊನಾ ಸೋಂಕು ತಗಲಿದ್ದು, ಇವರುಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಬದಲು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಈ ಜನಪ್ರತಿನಿಧಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರೆ ಅಲ್ಲಿನ ಅವ್ಯವಸ್ಥೆಯ ದರ್ಶನವಾಗುತ್ತಿತ್ತು ಎಂದು ಕೆಲವರು ಹೇಳಿದರೆ, ಮತ್ತೆ ಹಲವರು ಇವರುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಬಡವರಿಗೆ ಮತ್ತಷ್ಟು ಬೆಡ್ ಸಿಕ್ಕಿದಂತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದರ ಮಧ್ಯೆಯೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಶೃಂಗೇರಿ ಶಾಸಕ ರಾಜೇಗೌಡ ಬೆಂಗಳೂರಿನ ವಿಕ್ರಮ್ ಆಸ್ಪತ್ರೆ, ಕುಣಿಗಲ್ ಶಾಸಕ ರಂಗನಾಥ್ ಮಣಿಪಾಲ್ ಆಸ್ಪತ್ರೆ, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ, ನಾಗಮಂಗಲ ಶಾಸಕ ಸುರೇಶ್ ಗೌಡ ಮಣಿಪಾಲ್ ಆಸ್ಪತ್ರೆ, ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.