ದಾವಣಗೆರೆ: ಸಂಪುಟ ವಿಸ್ತರಣೆ ಸಮೀಪಿಸುತ್ತಿದ್ದಂತೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು ಎಂದಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಜನರಿಂದ ಆಯ್ಕೆಯಾದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು. ಇವರು ಸೋತವರಿಗೂ ಸಚಿವ ಸ್ಥಾನ ನೀಡುತ್ತಾರೆ ಎನ್ನುವುದಾದರೆ ಜನರು ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕರು ಸಭೆ ನಡೆಸಿ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದೇವೆ. ಸಚಿವ ಸ್ಥಾನ ನೀಡುವುದು ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದು, ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.