ಉತ್ತರ ಕರ್ನಾಟಕದ ಜನತೆಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಖುಷಿ ಸುದ್ದಿ ನೀಡಿದ್ದಾರೆ. 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ನಿತಿನ್ ಗಡ್ಕರಿ ಘೋಷಿಸಿದ್ದಾರೆ.
ಶುಕ್ರವಾರದಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ – ಧಾರವಾಡ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ, ಬೆಳಗಾವಿ ಚತುಷ್ಪಥ ವರ್ತುಲ ರಸ್ತೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಒಟ್ಟು 13 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 3 ವರ್ಷಗಳ ಅವಧಿಯಲ್ಲಿ ಮಹಾರಾಷ್ಟ್ರ – ಗೋವಾ ಸಂಪರ್ಕಿಸುವ ಕರ್ನಾಟಕದ 626 ಕಿಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ ಸಚಿವ ನಿತಿನ್ ಗಡ್ಕರಿ, ಪ್ರಗತಿಯಲ್ಲಿರುವ ಹುಬ್ಬಳ್ಳಿ – ಹೊಸಪೇಟೆ ಹೆದ್ದಾರಿ ಸೇರಿದಂತೆ ಹಲವು ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.