ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಬೆಂಬಿಡದೇ ಕಾಡುತ್ತಿದೆ. ಇತ್ತೀಚೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್ ನಲ್ಲಿ ತಿಳಿಸಿರುವ ಡಿಸಿಎಂ ಅಶ್ವತ್ಥ ನಾರಾಯಣ್, ವಿಧಾನಮಂಡಲ ಅಧಿವೇಶನ ಆರಂಭವಾಗುವ ಹಿನ್ನಲೆಯಲ್ಲಿ ಶನಿವಾರ ನಾನು ಕೊವಿಡ್ ಟೆಸ್ಟ್ ಗೆ ಒಳಗಾಗಿದ್ದೆ. ಈ ವೇಳೆ ನನಗೆ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಪ್ರತ್ಯೇಕವಾಗಿ ಇರುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ತಮ್ಮ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.