ಕೊರೊನಾ ಕಾರಣಕ್ಕೆ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಅಂತಿಮ ವರ್ಷದ ತರಗತಿ, ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸಲಾಗಿದೆ.
ಇದರ ಜೊತೆಗೆ ಇತರೆ ತರಗತಿ ವಿದ್ಯಾರ್ಥಿಗಳಿಗೂ ಸಹ ಶಾಲಾ – ಕಾಲೇಜು ಆರಂಭಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿರುವ ಮಧ್ಯೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಥಮ ಪಿಯುಸಿ ಆರಂಭದ ಕುರಿತಂತೆ ಮಹತ್ವದ ಮಾಹಿತಿ ನೀಡಿದ್ದಾರೆ.
ಶುಕ್ರವಾರದಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಮುಖ್ಯವಾಗಿವೆ. ಪ್ರಥಮ ಪಿಯು ತರಗತಿಗಳನ್ನು ಜನವರಿ 1ರಿಂದಲೇ ಆರಂಭಿಸಬೇಕಿತ್ತು ಎಂಬ ಅಭಿಪ್ರಾಯಗಳು ಈಗಾಗಲೇ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ರಾಜ್ಯ ಕೋವಿಡ್ ತಾಂತ್ರಿಕ ಸಮಿತಿಯ ಅಭಿಪ್ರಾಯ ಪಡೆದು ಶೀಘ್ರದಲ್ಲಿಯೇ ಪ್ರಥಮ ಪಿಯುಸಿ ತರಗತಿಗಳ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.