ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮೇ 17ರಿಂದ ಐದು ದಿನ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ವೆಂಟಿಲೇಟರ್ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಬೆಂಗಳೂರು ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಲ್ಲಿ, ಹಳ್ಳಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮೇ 24ರ ಬಳಿಕವೂ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಅಗತ್ಯವಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪನವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.