ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ತಮಗೆ ಪ್ರವಾಹ ಪೀಡಿತ ಕಲಬುರಗಿ ಜಿಲ್ಲೆಗೆ ಭೇಟಿ ನೀಡಲು ಸಾಧ್ಯವಿಲ್ಲ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ ಎಂದಿರುವ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಇದೀಗ ಶಿರಾ ಉಪಚುನಾವಣೆ ಪ್ರಚಾರಕ್ಕೆ ತೆರಳಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ಜಿಲ್ಲೆಯ ಜನರು ಮನೆ ಮಠ ಕಳೆದುಕೊಂಡು ಒಪ್ಪೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲೆಗೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸುವ ಬದಲು ಉಪಚುನಾವಣೆ ಪ್ರಚಾರದಲ್ಲಿ ತೊಡಗುವ ಮೂಲಕ ಬೇಜವಾಬ್ದಾರಿ ತೋರಿದ್ದಾರೆ.
ಇಂದು ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ನಡೆದ ಭರ್ಜರಿ ರೋಡ್ ಶೋ ನಲ್ಲಿ ಗೋವಿಂದ ಕಾರಜೋಳ ಪಾಲ್ಗೊಂಡಿದ್ದಾರೆ. ಕೊರೊನಾ ಸೋಂಕಿದೆ. ತುಂಬಾ ಸುಸ್ತು, ಹೀಗಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತೇನೆ ಎಂದು ಹೇಳಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಡಿಸಿಎಂ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.