ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಗುರುವಾರ ಒಂದೇ ದಿನ 889 ಮಂದಿ ಸೋಂಕು ಪೀಡಿತರು ಪತ್ತೆಯಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸೋಂಕು ಪೀಡಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಒಳಗೊಳ್ಳುವಂತೆ ಮಾಡಲಾಗುತ್ತಿದೆ. ಇದರ ಮಧ್ಯೆ ಸರ್ಕಾರಕ್ಕೆ ಮತ್ತೊಂದು ಸಂಕಟ ಎದುರಾಗಿದೆ.
ಹುದ್ದೆ ಕಾಯಂಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 507 ವೈದ್ಯರು ಜುಲೈ 8ಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ವೇತನವನ್ನು 45 ಸಾವಿರದಿಂದ 60 ಸಾವಿರಕ್ಕೆ ಏರಿಕೆ ಮಾಡಿದ್ದರೂ ಸಹ ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸದ ಕಾರಣ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಈ ವೈದ್ಯರು ತಿಳಿಸಿದ್ದಾರೆ.