ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲದರ ಮಧ್ಯೆ ಸರ್ಕಾರಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ಹೌದು, ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮದೇ ಆದ ರೀತಿಯಲ್ಲಿ ಇದರ ನಿಯಂತ್ರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 10 ರಿಂದ ರಾಜ್ಯದಾದ್ಯಂತ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರ ಮಧ್ಯೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ಇವರುಗಳಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿ ಯಾವುದೇ ಸುರಕ್ಷತಾ ಸಾಧನಗಳನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಹೇಳಲಾಗಿದೆ. ಜೊತೆಗೆ ವೇತನ ಹೆಚ್ಚಳ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.