ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಒಪ್ಪುತ್ತಿಲ್ಲ.
ಹೀಗಾಗಿ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದೆ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಸೋಂಕಿತರು ಹಾಗೂ ಸೋಂಕಿನ ಲಕ್ಷಣಗಳುಳ್ಳವರು ಆಸ್ಪತ್ರೆಗೆ ಬಂದ ವೇಳೆ ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ.
ಇದರ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಮತ್ತು ಮುಖ್ಯಸ್ಥರ ಜೊತೆ ಸಭೆ ನಡೆಸಿ ಮನವೊಲಿಸಲು ಮುಂದಾಗಲಿದ್ದು, ಒಂದೊಮ್ಮೆ ಸರ್ಕಾರ ನಿಗದಿಪಡಿಸಿದ ದರಕ್ಕೆ ಚಿಕಿತ್ಸೆ ನೀಡಲು ಒಪ್ಪದಿದ್ದರೆ ವಿಪತ್ತು ನಿಯಂತ್ರಣ ಕಾಯ್ದೆ ಅಸ್ತ್ರ ಪ್ರಯೋಗಿಸುವ ಸಾಧ್ಯತೆ ಇದೆ.