ಬೆಂಗಳೂರು: ಪದೇ ಪದೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಪಕ್ಷ ದೇಶದಲ್ಲಿಯೇ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಕೂಡ ಇನ್ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಇದು ಗೊತ್ತಿದ್ದರೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಾವು ಮುಂದಿನ ಮುಖ್ಯಮಂತ್ರಿಯಾಗುತ್ತೇವೆ ಎಂದು ಹಗಲುಗನಸು ಕಾಣುತ್ತಿರುವುದು ಹಾಸ್ಯಾಸ್ಪದ. ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂದೇ ಆ ಪಕ್ಷದ ಮುಖಂಡರು ಬೇರೆ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಸದಾ ಕಾಲ ಧಮ್ ಪದವನ್ನು ಬಳಸುವ ಡಿ.ಕೆ.ಶಿವಕುಮಾರ್ ಅವರಿಗೆ ಧಮ್ ಇದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ. ಈ ಮೂಲಕ ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆ ವುರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.