ಬೆಂಗಳೂರು: ತುರ್ತು ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.
ಕೇವಲ ಮೂರು ತಿಂಗಳ ಕಾಲದಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಈ ಐಸಿಯು, ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು, ದಾನಿಗಳ ನೆರವಿನಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಜಯದೇವ ಹೃದ್ರೋಗ ಆಸ್ಪತ್ರೆ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್ ಸ್ಥಾಪನೆ ಹಾಗೂ 50 ಹಾಸಿಗೆಯ ಟ್ರಾಮಾ ಕೇರ್ ಸೆಂಟರ್ ಹಾಗೂ 150 ಹಾಸಿಗೆಯ ತಾಯಿ- ಮಗು ಚಿಕಿತ್ಸಾ ಕೇಂದ್ರವನ್ನು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.
ಮಾಡ್ಯೂಲರ್ ಐಸಿಯುನಲ್ಲಿ ಇರುವ ಸೌಲಭ್ಯ:
ಸರಕು ಸಾಗಣೆ ಮಾಡುವ ಕಂಟೇನರ್ʼಗಳ ಮಾದರಿ ಇಟ್ಟುಕೊಂಡು ಈ ಐಸಿಯುಗಳನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 100 ಹಾಸಿಗೆಗಳು ಲಭ್ಯ ಇರುತ್ತವೆ. ಪ್ರತೀ ಒಂದು ಕಂಟೇನರ್ʼನಲ್ಲಿ (ಐಸಿಯುನಲ್ಲಿ) ಐದು ಐಸಿಯು ಹಾಸಿಗೆಗಳು ಇವೆ. ಎಲ್ಲ ಮಾಡ್ಯೂಲರ್ ಐಸಿಯುಗಳ ನಿರ್ವಹಣೆಗೆ ತಜ್ಞ ವೈದ್ಯರು, ಅರೆವೈದ್ಯ ಸಿಬ್ಬಂದಿ, ನರ್ಸ್ ಸೇರಿ ಒಟ್ಟು 150 ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಕೋವಿಡ್ ಮಾತ್ರವಲ್ಲದೆ ಯಾವುದೇ ರೀತಿಯ ಹೆಲ್ತ್ ಎಮರ್ಜೆನ್ಸಿಯಂಥ ಸಂದರ್ಭಗಳಲ್ಲಿ ಇಂಥ ಮಾಡ್ಯೂಲರ್ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಇವುಗಳನ್ನು ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಿ ಇಡಬಹುದು. ಪ್ರತಿ ಐಸಿಯು ಒಂದರ ಗಾತ್ರ 12.135 X 3.3 X 2.62 ಮೀಟರ್ ಇದ್ದು, ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯ, ಕುಶಲತೆಯನ್ನು ಇವು ಹೊಂದಿರುತ್ತವೆ.
ಹೈ ಸ್ಪೀಡ್ ವೈಫೈ, ಪ್ರತ್ಯೇಕ ಲ್ಯಾನ್ ಕೇಬಲ್, ಎಚ್‌ಡಿ ಕ್ಯಾಮೆರಾಗಳು, ಸೆಂಟ್ರಲ್ ಮಾನಿಟರಿಂಗ್ ಸಿಸ್ಟಂ, ಪ್ರತ್ಯೇಕ ನೀರು ಮತ್ತು ಒಳಚರಂಡಿ ವ್ಯವಸ್ಥೆ ಪ್ರತಿ ಮಾಡ್ಯೂಲರ್ ಐಸಿಯುಗೂ ಇರುತ್ತದೆ. ಜತೆಗೆ, ಸೆಂಟ್ರಲ್ ಮಾನಿಟರಿಂಗ್ ಸಿಸ್ಟಮ್ ಮೂಲಕ ವೈದ್ಯರು ಎಲ್ಲೇ ಇದ್ದರೂ ಸುಲಭವಾಗಿ ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಬಹುದು.
ಲಿಕ್ವಿಡ್ ಆಕ್ಸಿಜನ್ (ದ್ರವರೂಪದ ಆಮ್ಲಜನಕ) ವ್ಯವಸ್ಥೆ ಇರುತ್ತದೆ. ಇದರ ಪ್ರಮಾಣವನ್ನು 2,000 ಲೀಟರುಗಳಿಂದ 8,000 ಲೀಟರಿಗೆ ಹೆಚ್ಚಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆ ಜತೆಗೆ, ಶುದ್ಧ ಗಾಳಿ ತುಂಬಿಸಿ ಕಂಪ್ಲೀಟ್ ಏರ್ʼಟೈಟ್ ಮಾಡಲಾಗಿರುತ್ತದೆ. ನಮ್ಮ ದೇಶದಲ್ಲೇ ಇದೇ ಮೊದಲ ಪ್ರಯೋಗ. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿಯಾಗಿದ್ದು, ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.
ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ʼರಿನ್ಯಾಕ್’ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದೆ.