ಕೊರೊನಾ ಸಂದರ್ಭದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದು ಈಗಾಗಲೇ ಫಲಿತಾಂಶ ಹೊರಬಿದ್ದಿದೆ. ಬಹಳಷ್ಟು ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ಪ್ರವೇಶ ಪಡೆಯುವ ಹಾದಿಯಲ್ಲಿದ್ದು, ಅವರುಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.
2020 – 21 ನೇ ಸಾಲಿನಿಂದ ಎಲ್ಲಾ ಸರ್ಕಾರಿ ಕಾಲೇಜುಗಳು ಆನ್ ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಬೇಕೆಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹೇಳಿದ್ದು, ವಿದ್ಯಾರ್ಥಿಗಳು ಮೊಬೈಲ್ ಮೂಲಕವೂ ಪ್ರವೇಶ ಕೋರಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈಗಾಗಲೇ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಒಂದು ವೇಳೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಸಂಬಂಧಪಟ್ಟ ಕಾಲೇಜಿನಿಂದ ಮುದ್ರಿತ ಅರ್ಜಿ ಪಡೆದು ದ್ವಿತೀಯ ಪಿಯುಸಿ ಅಂಕಪಟ್ಟಿಯ ದೃಢೀಕೃತ ಪ್ರತಿಯೊಂದಿಗೆ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾಗಿರುವ ಕುರಿತಂತೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗುತ್ತದೆ.