ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ಸಿಎಂ ಯಡಿಯೂರಪ್ಪನವರ ಸಂಪುಟದಲ್ಲಿ 7 ಸ್ಥಾನಗಳು ಖಾಲಿಯಿದೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನನಗೆ ಸಚಿವ ಸ್ಥಾನ ಸಿಕ್ಕರೆ ಸಂತಸ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಯಾರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ ಅವರಿಗೆ ಸಹಕರಿಸುತ್ತೇನೆ ಎಂದರು.
ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.