ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಬಲವಾಗಿ ಕೇಳಿ ಬರುತ್ತಿತ್ತು. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿ ಮತ್ತೊಬ್ಬರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂಬ ವದಂತಿ ಹರಿದಾಡಿತ್ತು. ಈಗ ಅದೆಲ್ಲದಕ್ಕೂ ತೆರೆಬಿದ್ದಿದೆ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸುವುದು ಈಗ ಖಚಿತವಾಗಿದೆ. ನವದೆಹಲಿಗೆ ತೆರಳಿದ್ದ ಯಡಿಯೂರಪ್ಪನವರು ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಪಡೆಯುವುದರ ಜೊತೆಗೆ ನಾಯಕತ್ವ ಬದಲಾವಣೆಯೇ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಅಲ್ಲದೆ, ತಾವು ಈ ಹಿಂದೆ ಮಾತುಕೊಟ್ಟಂತೆ ಸರ್ಕಾರ ರಚನೆಗೆ ನೆರವಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರುಗಳಿಗೆ ಸಚಿವ ಸ್ಥಾನ ಕಲ್ಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ನಾಳೆ ಸಂಜೆಯೊಳಗಾಗಿ ಸಂಪುಟ ವಿಸ್ತರಣೆ ನಡೆಯಲಿದ್ದು, ಇಬ್ಬರ ಜೊತೆಗೆ ಇನ್ನೂ ಮೂವರು ಸಚಿವರಾಗಲಿದ್ದಾರೆ ಎನ್ನಲಾಗುತ್ತಿದೆ.