ರಾಜ್ಯ ಪೊಲೀಸ್ ಇಲಾಖೆಯು ಈ ಹಿಂದೆ 6,686 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇದರ ಮಧ್ಯೆ ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿತ್ತು. ಹೀಗಾಗಿ ಉದ್ಯೋಗ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಸಮಸ್ಯೆಯಾಗಿತ್ತು.
ಇದೀಗ ಅಂತವರಿಗೆ ಸಿಹಿಸುದ್ದಿ ನೀಡಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದ್ದು, ಇನ್ನುಳಿದಂತೆ ವಯೋಮಿತಿ ಸೇರಿ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ತಿಳಿಸಲಾಗಿದೆ.
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಮತ್ತು ಬ್ಯಾಂಡ್ಸ್ ಮನ್ 2,673 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಜುಲೈ 6 ರವರೆಗೆ ಅವಕಾಶ ನೀಡಲಾಗಿದ್ದು, ಶುಲ್ಕ ಪಾವತಿಸಲು ಜುಲೈ 8 ಕೊನೆಯ ದಿನವಾಗಿರುತ್ತದೆ. ನಾಗರಿಕ ಪೊಲೀಸ್ ಕಾನ್ಸ್ಟೇಬಲ್ 2,565 ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 1,449 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 13 ರವರೆಗೆ ಅವಕಾಶವಿದ್ದು, ಶುಲ್ಕ ಪಾವತಿಗೆ ಜುಲೈ 15ರ ವರೆಗೆ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ www.ksp.gov.in ಗೆ ಭೇಟಿ ನೀಡಬಹುದಾಗಿದೆ.