ನೆನೆಗುದಿಗೆ ಬಿದ್ದಿದ್ದ ರಾಜ್ಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆ ನೇಮಕಾತಿಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆಗೊಂಡಿರುವ ಒಟ್ಟು 1203 ಅಭ್ಯರ್ಥಿಗಳಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯ ಕೆ ಸ್ವಾನ್ ಕೊಠಡಿಯಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ಹಾಜರಾಗಬಹುದಾಗಿದೆ. ಸ್ವಂತ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಕೌನ್ಸೆಲಿಂಗ್ ಗೆ ಹಾಜರಾಗಬೇಕೆಂಬ ನಿಯಮವಿಲ್ಲ.
ವಿಷಯಗಳ ವೇಳಾಪಟ್ಟಿ, ಅಭ್ಯರ್ಥಿಗಳ ಜೇಷ್ಠತಾ ಪಟ್ಟಿ ಹಾಗೂ ಖಾಲಿ ಹುದ್ದೆಗಳ ಮಾಹಿತಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ www.pue.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದ್ದು, ಅಭ್ಯರ್ಥಿಗಳು ಇದರನ್ವಯ ಗಂಟೆ ಮುಂಚಿತವಾಗಿ ಆಯಾ ಜಿಲ್ಲೆಗಳ ಜಿಲ್ಲಾ ಉಪ ನಿರ್ದೇಶಕರಿಗೆ ವರದಿ ಮಾಡಿಕೊಳ್ಳಬೇಕಿದೆ.