ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಕೊವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನೆ, ರ್ಯಾಲಿ ಮಾಡುವಂತಿಲ್ಲ. ಮಾಡಿದರೆ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್ ಡಿಎಂಎ ಆಕ್ಟ್ ನಡಿ ಕ್ರಮ ಕೈಗೊಳ್ಳಲಾಗುವುದು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರೆ, ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಾಳೆ ಪ್ರತಿಭಟನೆ ನಡೆಸಲು ಮುಂದಾದ ಹಲವರನ್ನು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ವಶಕ್ಕೆ ಪಡೆದುಕೊಳ್ಳಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟು ಮಾಡಿದರೆ ಅವರಿಂದಲೇ ವಸೂಲಿ ಮಾಡಲಾಗುತ್ತದೆ. ಮುಚ್ಚಳಿಕೆಗೆ ಸಹಿ ಮಾಡಿಸಿಕೊಳ್ಳಲಾಗುತ್ತದೆ ಎಂದರು.
ಇನ್ನು ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಪ್ರತಿ ವಲಯಕ್ಕೂ ಇಬ್ಬರು ಡಿಸಿಪಿಗಳ ನಿಯೋಜನೆ ಮಾಡಲಾಗುತ್ತಿದೆ. 47 ಕೆ ಎಸ್ ಆರ್ ಪಿ, 26 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.