ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಕರಾವಳಿ, ಕೊಡಗು, ಮಲೆನಾಡು ಹಾಗೂ ಉತ್ತರ ಕರ್ನಾಟಕ ಜಿಲ್ಲೆಯ ಜನ ಮಳೆಯಿಂದ ತತ್ತರಿಸಿಹೋಗಿದ್ದಾರೆ.
ಇದರ ಮಧ್ಯೆ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆ.ಆರ್.ಎಸ್. ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಹೀಗಾಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಇದರಿಂದ ಕಾವೇರಿ ನದಿಪಾತ್ರದ ಜನತೆಗೆ ಪ್ರವಾಹ ಭೀತಿ ಎದುರಾಗಿದ್ದು, ನದಿಪಾತ್ರದ ಗ್ರಾಮಗಳಲ್ಲಿ ವಾಹನದ ಮೂಲಕ ಮಾಹಿತಿ ನೀಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಇನ್ನಷ್ಟು ನೀರು ಬಿಡುವ ಸಾಧ್ಯತೆ ಇರುವುದರಿಂದ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.