ರಾಜ್ಯ ಸರ್ಕಾರ ಅಲೋಪತಿ ಔಷಧ ನೀಡುವ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ ವೈದ್ಯರು ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಅಲೋಪತಿ ಔಷಧ ಬಳಸಲು ಈ ಹಿಂದೆ ನೀಡಿದ್ದ ಆದೇಶವನ್ನು ಈಗ ಹಿಂಪಡೆಯಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಿಸುತ್ತಿರುವ ಮಧ್ಯೆ ಸರ್ಕಾರ ಕೈಗೊಂಡಿರುವ ಈ ತೀರ್ಮಾನ ಈಗ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಸಂಘ ಸ್ವಾಗತಿಸಿದರೆ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಸರ್ಕಾರದ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅಲೋಪತಿ ಔಷಧ ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿದೆ.
ದೇಶದ 12 ರಾಜ್ಯಗಳಲ್ಲಿ ಆಯುಷ್ ವೈದ್ಯರಿಗೆ ಅಲೋಪತಿ ಔಷಧ ನೀಡಲು ಅನುಮತಿ ಇದ್ದು ಕರ್ನಾಟಕದಲ್ಲಿ ಮಾತ್ರ ನಿರ್ಬಂಧ ಏಕೆ ಎಂಬ ಪ್ರಶ್ನೆ ಕೇಳಿಬರುತ್ತಿದ್ದು, ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.