
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಆರಂಭದಿಂದಲೂ ಅವರು ಮತ್ತು ಅವರ ಕುಟುಂಬದವರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಅಲ್ಲದೆ ಅಧಿಕಾರದ ದುರ್ಬಳಕೆಯಲ್ಲಿ ತೊಡಗಿರುವ ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಗುಡುಗಿದ್ದರು.
ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ಟೀಕೆಗಳಿಂದ ಬೇಸತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು, ಯತ್ನಾಳ್ ವಿರುದ್ಧ ಬಿಜೆಪಿ ನಾಯಕತ್ವ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಯತ್ನಾಳ್ ಅವರಿಗೆ ಎಚ್ಚರಿಕೆ ನೀಡಿದ್ದಲ್ಲದೆ ಬಿಜೆಪಿ ಕೇಂದ್ರ ವರಿಷ್ಠರು ನೋಟಿಸ್ ಸಹ ನೀಡಿದ್ದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಬಿಸಿತುಪ್ಪವಾದ ಪೆಟ್ರೋಲ್ ದರ ಇಳಿಕೆ ಸಾಧ್ಯತೆ
ಆದರೆ ಇದ್ಯಾವುದಕ್ಕೂ ಜಗ್ಗದ ಬಸನಗೌಡ ಪಾಟೀಲ್ ಯತ್ನಾಳ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಮತ್ತೆ ಗುಡುಗಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದು ಹೋಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅಧಿವೇಶನದಲ್ಲೇ ಸ್ವಪಕ್ಷೀಯ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. ಹೀಗಾಗಿ ಬಿಜೆಪಿ ವರಿಷ್ಠರ ಮಾತಿಗೂ ಯತ್ನಾಳ್ ಬೆಲೆ ಕೊಡುತ್ತಿಲ್ಲವೇ ಎಂಬ ಪ್ರಶ್ನೆ ಈಗ ಮೂಡಿದೆ.