ಬೆಂಗಳೂರು; ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ನಳೀನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬದಲಿಗೆ ಬಿ.ಎಸ್.ಯಡಿಯೂರಪ್ಪನವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಉಪ ಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು ಎಂದು ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಟಾಸ್ಕ್ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಗುಡುಗಿದ್ದಾರೆ.
ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಇದ್ದರೆ ನಳೀನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ ನಾಲಿಗೆ ಬಿಗಿ ಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಎಲ್ಲರ ಮಾನ ಕಳೆಯುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಟ್ಟು ಬರಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.