ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಟೀಕೆ ಉಗ್ರರ ವಿರುದ್ಧವಿರಬೇಕೆ ಹೊರತು, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಬದುಕು ನೀಡುತ್ತಿರುವ ನಮ್ಮ ಬೆಂಗಳೂರಿನ ಬಗ್ಗೆಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿ ಗುಡುಗಿರುವ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯಲ್ಲಿನ ಅಪ್ರಬುದ್ಧರ ಹೇಳಿಕೆ ಬಿಜೆಪಿ ಹಿರಿಯ ನಾಯಕರಿಗೂ ಮಾಡಿದ ಅಪಮಾನ ಎಂದಿದ್ದಾರೆ.
ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ, ಬೆಂಗಳೂರು 28 ವಿಧಾನಸಭಾ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಮ್ಮೆಲರ ಹೆಮ್ಮೆ. ಅಪ್ರಬುದ್ಧ ಹೇಳಿಕೆ ನೀಡಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.