ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿ ನವೀನ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿದ್ದನೆಂಬ ವಿಚಾರಕ್ಕೆ ಆಕ್ರೋಶ ಭುಗಿಲೆದ್ದು ಬೆಂಗಲೂರಿನ ಡಿಜೆ ಹಳ್ಳಿ, ಕಾವಲ್ ಬೈರಸಂದ್ರ, ಕೆಜಿಹಳ್ಳಿ ಪ್ರದೇಶದಲ್ಲಿ ಮಂಗಳವಾರ ಸಂಜೆಯಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ.
ಶಾಸಕ ಅಖಂಢ ಶ್ರೀನಿವಾಸ ಮೂರ್ತಿಯವರ ಮನೆ, ಕಛೇರಿಗೆ ಬೆಂಕಿ ಹಚ್ಚಿರುವುದಲ್ಲದೆ ಸಾರ್ವಜನಿಕರ ಆಸ್ತಿಪಾಸ್ತಿಗೂ ಬೆಂಕಿ ಹಚ್ಚಿ ಹಾನಿ ಮಾಡಲಾಗಿದೆ. ಇಷ್ಟೇ ಅಲ್ಲ, ಗಲಭೆಕೋರರು ಪೊಲೀಸ್ ಠಾಣೆ ಮೇಲೂ ದಾಳಿ ಮಾಡಲು ಮುಂದಾಗಿದ್ದು, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಗೆ ಮೂವರು ಬಲಿಯಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಈ ಮಧ್ಯೆ ಗಲಭೆ ಹಿಂದೆ ಕಾಣದ ಕೈಗಳ ಕೈವಾಡವಿದೆಯಾ ಎಂಬ ಅನುಮಾನ ಈಗ ಎಲ್ಲರನ್ನೂ ಕಾಡತೊಡಗಿದೆ. ಇದಕ್ಕೆ ಪೂರಕವೆಂಬಂತೆ ಗಲಭೆಕೋರರು ತಮ್ಮ ಗುರುತು ಸಿಗಬಾರದೆಂಬ ಕಾರಣಕ್ಕೆ ಮಾರ್ಗದುದ್ದಕ್ಕೂ ಕಣ್ಣಿಗೆ ಕಂಡ ಸಿಸಿ ಟಿವಿ ಕ್ಯಾಮರಾಗಳನ್ನು ಧ್ವಂಸ ಮಾಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಏಕಾಏಕಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಕೊರೊನಾ ಸಂಕಷ್ಟದ ವೇಳೆ ನೂರಾರು ಸಂಖ್ಯೆಯಲ್ಲಿ ಜನ ಸೇರಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಈಗ ಮೂಡಿದೆ.
ಪೊಲೀಸರು ಈ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲು ಮುಂದಾಗಿದ್ದು, ಗಲಭೆಗ್ರಸ್ಥ ಪ್ರದೇಶದಲ್ಲಿ ಈಗ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 137 ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಮತ್ತಷ್ಟು ಮಂದಿ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ. ಪೊಲೀಸರ ಸಮಗ್ರ ತನಿಖೆಯಿಂದ ಗಲಭೆ ಹಿಂದಿರುವ ಕಾಣದ ಕೈಗಳ ಕೈವಾಡ ಬಹಿರಂಗವಾಗುವ ನಿರೀಕ್ಷೆಯಿದೆ.