ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
‘ಯಥಾ ರಾಜಾ ತಥಾ ಮಂತ್ರಿ’. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ಪ್ರಧಾನಿ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ? ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಸಿಎಂ ಯಡಿಯೂರಪ್ಪ ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಸ್ಮಶಾನಗಳಲ್ಲಿ ಹೆಣಗಳ ಸಾಲು…..ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ; ಇದೇನಾ ಪ್ರಧಾನಿ ಮೋದಿ ಅಚ್ಚೇ ದಿನ್….?
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ಎಂದು ಸಂಸದರನ್ನು ಪ್ರಶ್ನಿಸಿದ್ದಾರೆ.
ಕೋವಿಡ್ ಆರಂಭವಾದ ದಿನಗಳಲ್ಲೇ ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತ ನಾನು ಬಹಿರಂಗ ಪಡಿಸಿದ್ದೆ. ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರು, ಸಂಸದರ ವಿರುದ್ಧ. ದೊಡ್ಡ ತಿಮಿಂಗಲಗಳ ರಕ್ಷಣೆಗಾಗಿ ಸಣ್ಣ ಮಿಕಗಳನ್ನು ಹಿಡಿಯಲಾಗುತ್ತಿದೆಯೇ? ಎಂದು ಕಿಡಿಕಾರಿದ್ದಾರೆ.