ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ರಾಜ್ಯ ಸರ್ಕಾರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡಲು ಈಗಾಗಲೇ ತೀರ್ಮಾನ ಕೈಗೊಂಡಿದೆ.
ಅಂತಿಮ ವರ್ಷದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಅಥವಾ ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಅವರುಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿತ್ತು. ಆದರೆ ಕೆಲವು ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆಯನ್ನು ಮಾತ್ರ ನಡೆಸಿ ಬ್ಯಾಕ್ ಲಾಗ್ ವಿಷಯಗಳ ಪರೀಕ್ಷೆ ನಡೆಸದಿರಲು ತೀರ್ಮಾನಿಸಿರುವ ಸಂಗತಿ ಸರ್ಕಾರದ ಗಮನಕ್ಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಆದೇಶವೊಂದನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆ ಜೊತೆಗೆ ಬ್ಯಾಕ್ ಲಾಗ್ ವಿಷಯಗಳ ಪರೀಕ್ಷೆಗಳನ್ನೂ ನಡೆಸುವಂತೆ ಸೂಚನೆ ನೀಡಿದ್ದಾರೆ.