
ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿದ್ದು, ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕ್ರಮ ಕೈಗೊಳ್ಳಲು 85.49 ಕೋಟಿ ರೂ ಬಿಡುಗಡೆ ಮಾಡಿದ್ದಾರೆ. ನೆರೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಪ್ರವಾಹದಲ್ಲಿ ಸಿಲುಕಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಜನರ ನೋವಿಗೆ ತಕ್ಷಣ ಸ್ಪಂದಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಅಲ್ಲದೇ ನೆರೆಯಿಂದ ಸಂತ್ರಸ್ತರಾದ ಜನರಿಗೆ ಉತ್ತಮ ಆಹಾರ ಪೂರೈಕೆ ಹಾಗೂ ವೈದ್ಯಕೀಯ ತಪಾಸಣೆಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.