ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಸೂದೆ ಪ್ರತಿಯನ್ನು ಹರಿದು ಹಾಕಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಕುರಿತು ಚರ್ಚೆ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲ ಉಂಟಾಗಿದೆ. ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಯ್ದೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ರೈತರ ಮರಣ ಶಾಸನವಾಗಿರುವ ಈ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಕಾರಣಕ್ಕಾಗಿ ಸರ್ಕಾರ ಶಾಮೀಲಾಗಿ ಈ ಮಸೂದೆಯನ್ನು ಮಂಡಿಸಿದೆ. ರೈತರು, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೂ ಮಸೂದೆ ಮಂಡನೆ ಮಾಡಿರುವುದು ಖಂಡನೀಯ. ಭೂ ಸುಧಾರಣೆ ಮಸೂದೆ ಕಾಯ್ದೆಯಾಗಿ ಜಾರಿಯಾಗಲು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಕಿಡಿಕಾರಿದರು.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಭೂ ಸುಧಾರಣೆ ಮಸೂದೆ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ಆರಂಭವಾಗಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.