ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಕುರಿತು 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಲಾಕ್ ಡೌನ್ ಹೇರುವ ಬಗ್ಗೆ ಯಾವುದೇ ಪ್ರಸಾಪ ಮಾಡಿಲ್ಲ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿತರ ಪ್ರಮಾಣ ಶೇ.63ರಷ್ಟು ಹೆಚ್ಚುತ್ತಿರುವ 7 ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ ಹಾಗೂ ಪಂಜಾಬ್ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಪ್ರಸ್ತಾಪವಾಗಿಲ್ಲ. ಚಳಿಗಾಲದಲ್ಲಿ ಸೋಂಕಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿರುವುದರಿಂದ ಈ ಬಗ್ಗೆ ಗಮನ ಹರಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಹಲವರಲ್ಲಿ ಸೋಂಕಿನ ಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಪಾಸಿಟಿವ್ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪ್ರಧಾನಿ, ಅಂತವರನ್ನು ಟಿಪಿಸಿಆರ್ ಗೆ ಕಡ್ಡಾಯ ಒಳಪಡಿಸಿ, ಸೋಂಕಿತರ ಪರೀಕ್ಷೆ, ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.
ಈಗಾಗಲೇ ಲಾಕ್ ಡೌನ್ ನಿಂದಾಗಿ ಸಾಕಷ್ಟು ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಮತ್ತೆ ಲಾಕ್ ಡೌನ್ ಅಗತ್ಯವಿಲ್ಲ. ಅಗತ್ಯವಿದ್ದರೆ ಆಯಾ ರಾಜ್ಯಗಳು ಸೋಂಕಿತರು ಹೆಚ್ಚಿರುವ ಪ್ರದೇಶಗಳಲ್ಲಿ ಮುಂಜಾಗೃತೆ ವಹಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
ಇನ್ನು ಪ್ರಧಾನಿ ಮೋದಿ ಸಭೆ ಕುರಿತು ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಮತ್ತೆ ಲಾಕ್ ಡೌನ್ ಪ್ರಸ್ತಾಪ ಮಾಡಿಲ್ಲ. ಕರ್ನಾಟಕದಲ್ಲಿಯೂ ಮತ್ತೆ ಲಾಕ್ ಡೌನ್ ಇಲ್ಲ. ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಹೆಚ್ಚು ನಿಗಾವಹಿಸಿ. ಜನಜೀವನಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.