ಬೆಂಗಳೂರು: ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ಲಕ್ಷ್ಮಣ ಸವದಿ 15 ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒಂದೂವರೆ ತಿಂಗಳು ಗಡುವು ನೀಡಲಾಗಿದ್ದು, ಅಷ್ಟರಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರು ಒಟ್ಟು 9 ಬೇಡಿಕೆಗಳನ್ನು ಇಟ್ಟಿದ್ದರು. ಆ ಪೈಕಿ 3 ಬೇಡಿಕೆಗಳನ್ನು ಈಡೇರಿಸಲಾಗಿದೆ. ಇನ್ನು 15 ದಿನಗಳಲ್ಲಿ ಆ ಬೇಡಿಕೆಗಳನ್ನೂ ಈಡೇರಿಸುತ್ತೇವೆ. ಯಾರೂ ಕೂಡ ನೌಕರರನ್ನು ತಪ್ಪು ದಾರಿಗೆ ಎಳೆಯಬಾರದು. ಸಾರಿಗೆ ನೌಕರರಿಗೆ ನಮ್ಮ ಮೇಲೆ ಭರವಸೆ ಇದೆ. ನಾವೆಲ್ಲರೂ ಒಂದೇ ಕುಟುಂಬದವರಂತೆ ಇದ್ದೇವೆ ಎಂದು ಹೇಳಿದ್ದಾರೆ.
ಸಿಬ್ಬಂದಿಗಳ 2 ವರ್ಷ ತರಬೇತಿ ಅವಧಿಯನ್ನು 1 ವರ್ಷಕ್ಕೆ ಇಳಿಸಿದ್ದೇವೆ. ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೆ ತರಲು ಸಮಿತಿ ವರದಿ ನೀಡಿದೆ. ಹಣಕಾಸು ಇಲಾಖೆಯಿಂದ ಹಣ ಬಾರದ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳ ಅರ್ಧ ಸಂಬಳವನ್ನು ಮಾತ್ರ ಪಾವತಿಸಲಾಗಿದೆ. ಎರಡು ಮೂರು ದಿನಗಳಲ್ಲಿ ಹಣ ಬರಲಿದ್ದು, ಉಳಿದ ಸಂಬಳವನ್ನು ಎಲ್ಲರಿಗೂ ನೀಡುವುದಾಗಿ ಹೇಳಿದರು.