ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಅವರಿಗೆ ನಾನು ಶುಭಾಶಯ ಕೋರುತ್ತೇನೆ. ಹುಟ್ಟುಹಬ್ಬಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪತ್ರಿಕೆಗಳಿಗೆ ಪುಟಗಟ್ಟಲೆ ಜಾಹಿರಾತು ನೀಡಲಾಗಿದೆ. ಮೋದಿಯವರು ಭಾರಿ ಸಾಧನೆ ಮಾಡಿದ್ದಾರೆ ಎಂದು ಜಾಹೀರಾತಿನಲ್ಲಿ ಬಿಂಬಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ನೋಟು ಅಮಾನ್ಯ, ಅವೈಜ್ಞಾನಿಕ ಜಿ.ಎಸ್.ಟಿ. ಹಾಗೂ ಕೆಟ್ಟ ಹಣಕಾಸು ನೀತಿಯಿಂದಾಗಿ ದೇಶ ಆರ್ಥಿಕವಾಗಿ ಭಾರಿ ಕೆಳಮಟ್ಟಕ್ಕೆ ಹೋಗಿದೆ. ಜಿಡಿಪಿಯೂ ಭಾರಿ ಕುಸಿತ ಕಂಡಿದೆ. ಇದರಿಂದ ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಈ ಸಂದರ್ಭದಲ್ಲಿ ಇಂದು ನಿರುದ್ಯೋಗ ದಿನವನ್ನು ಆಚರಿಸುತ್ತಿರುವವರಿಗೆ ನನ್ನ ಬೆಂಬಲವಿದೆ ಎಂದಿದ್ದಾರೆ.
ಡ್ರಗ್ಸ್ ಹಗರಣದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಪ್ರಮುಖ ಆರೋಪಿಗಳನ್ನು ಬಂಧಿಸದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಆದ್ದರಿಂದ ಇಡೀ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ. ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಯಡಿಯೂರಪ್ಪ ಅವರ ಜೊತೆಗೆ ಪುತ್ರ ವಿಜಯೇಂದ್ರ ಅವರೂ ಪರ್ಯಾಯ ಮುಖ್ಯಮಂತ್ರಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ವೈದ್ಯರ ಜೊತೆ ಸಭೆ ನಡೆಸಲು ಬಿಜೆಪಿಯಲ್ಲಿ ಬೇರೆ ಪದಾಧಿಕಾರಿಗಳು ಇರಲಿಲ್ಲವೇ ? ಮಾಧ್ಯಮಗಳು, ಜನರ ಧ್ವನಿಯಾಗಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಹುಳುಕು, ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಬೆಳಕು ಚೆಲ್ಲಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.