ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರಾವಧಿ ಕುರಿತಂತೆ ಅಭಯ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿಯ ನಾಲ್ವರು ಉನ್ನತ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಶನಿವಾರ ರಾತ್ರಿ ಹೋಟೆಲ್ ನಿಂದ ಯಡಿಯೂರಪ್ಪನವರು ತೆರಳಿದ ಬಳಿಕ ಅಮಿತ್ ಶಾ ಅವರು ಬಿ.ಎಲ್. ಸಂತೋಷ್, ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್ ಹಾಗೂ ಸಿ.ಟಿ. ರವಿ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಮತ್ತೊಮ್ಮೆ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಂತಾಗಿದೆ.
ಯಡಿಯೂರಪ್ಪನವರ ವರ್ಚಸ್ಸನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಬಿಜೆಪಿ ನಾಯಕರು ನಾಯಕತ್ವ ಬದಲಾವಣೆ ಕುರಿತಂತೆ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ ಎನ್ನಲಾಗಿದ್ದು, ಒಂದೊಮ್ಮೆ ನಾಯಕತ್ವ ಬದಲಾವಣೆಗೆ ಮುಂದಾದರೆ ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಬೇಕಾಗಬಹುದು ಎಂಬ ಆತಂಕವೂ ಕಾಡುತ್ತಿದೆ. ಹೀಗಾಗಿಯೇ ಶನಿವಾರದ ಪ್ರತ್ಯೇಕ ಸಭೆಯಲ್ಲಿ ಎಲ್ಲ ವಿಚಾರಗಳ ಚರ್ಚೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.