ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇನ್ನೂ ಬಂಧಿಸದಿರುವುದು ಅಚ್ಚರಿ ತಂದಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಪತ್ ರಾಜ್ ತಲೆಮರೆಸಿಕೊಂಡಿದ್ದು, ಸಿಸಿಬಿ ಅಧಿಕಾರಿಗಳು ಸಂಪತ್ ರಾಜ್ ಬಂಧನಕ್ಕೆ ಬಲೆ ಬೀಸಿದ್ದಾರೆ. ಆದರೆ ಈವರೆಗೂ ಸಂಪತ್ ರಾಜ್ ಬಂಧನವಾಗಿಲ್ಲ. ಈ ನಿಟ್ಟಿನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನ್ಯಾಯಾಧೀಶ ಅಭಯ್ ಶ್ರೀನಿವಾಸ್ ಓಕಾ, ರಾಜಕಾರಣಿಯೋರ್ವರನ್ನು ಬಂಧಿಸಲು ಆಗದಿರುವುದು ಆಶ್ಚರ್ಯಕರವಾಗಿದೆ. ಸಂಪತ್ ರಾಜ್ ಬಂಧನಕ್ಕೆ ತನಿಖಾಧಿಕಾರಿ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮಗಳ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಕೊರೊನಾ ಪಾಸಿಟೀವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದಲೆ ಎಸ್ಕೇಪ್ ಆಗಿದ್ದಾರೆ. ಈ ನಡುವೆ ಸಂಪತ್ ರಾಜ್ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದ್ದು, ಶರಣಾಗುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಸೂಚನೆ ನೀಡಿದ್ದಾರೆ.