ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಿಂದ ರಾಜಭವನ ಚಲೋ ಚಳುವಳಿ ಆರಂಭವಾಗಿದ್ದು, ಕಾಂಗ್ರೆಸ್ ಗೆ ರೈತರು ಸಾಥ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಅನ್ನದಾತನ ಆಕ್ರೋಶ ಭುಗಿಲೆದ್ದಿದೆ.
ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ರೈತರು ಆಗಮಿಸುತ್ತಿದ್ದು, ಟ್ರ್ಯಾಕ್ಟರ್ ಗಳ ಮೂಲಕ ಸಾಗರೋಪಾದಿಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಮೂಲಕವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರು ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಪ್ರತಿಭಟನೆ ಬೆನ್ನಲ್ಲೇ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಈಗಾಗಲೇ ಫ್ರೀಡಮ್ ಪಾರ್ಕ್ ಸುತ್ತಮುತ್ತ, ಮೌರ್ಯ ವೃತ್ತ, ಮೈಸೂರು ರಸ್ತೆ ಸೇರಿದಂತೆ ವಿವಿಧೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈಗಾಗಲೇ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತರು ಈ ದೇಶದ ಶಕ್ತಿ, ಅವರನ್ನು ಉಳಿಸಿ ಬೆಳಸಬೇಕಾದ್ದು ನಮ್ಮ ಕರ್ತವ್ಯ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಕೆಲಸ ನಡೆದಿದೆ. ಯಾರಿಗೂ ಹೆದರುವ ಅಗತ್ಯವಿಲ್ಲ. ರಾಜಭವನ ಚಲೋ ತಡೆಯುವ ಯತ್ನ ನಡೆದರೆ ಪ್ರತಿಭಟನಾ ನಿರತ ರೈತರು ಅದೇ ಸ್ಥಳದಲ್ಲಿ ಕುಳಿತು ಹೋರಾಟ ನಡೆಸುವಂತೆ ಕರೆ ನೀಡಿದ್ದಾರೆ.