ವರುಣ ದೇವನ ಆರ್ಭಟಕ್ಕೆ ರಾಜ್ಯದ ಒಂದಿಷ್ಟು ಜಿಲ್ಲೆಗಳ ಜನ ಈಗಾಗಲೇ ಬೇಸತ್ತು ಹೋಗಿದ್ದಾರೆ. ಮಳೆರಾಯನ ಆರ್ಭಟದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಿದ್ದಿವೆ. ಕಳೆದ ನಾಲ್ಕೈದು ದಿನಗಳಲ್ಲಿ ಸುರಿದ ಭಾರೀ ಮಳೆಗೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಜಿಲ್ಲೆಗಳ ಜನ ತತ್ತರಿಸಿದ್ದಾರೆ. ಇದೀಗ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ನೀಡಿದ್ದರೆ, ಇತ್ತ ಮಲೆನಾಡು, ಕೊಡಗು, ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ.
ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಮಳೆ ಮುಂದುವರೆಯಲಿದೆ. ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಮನೆ, ಗುಡ್ಡ ಕುಸಿತ ಪ್ರಕರಣಗಳು ಆಗಿವೆ. ಜಲಾಶಯಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದೀಗ ಮತ್ತೆ ಮಳೆ ಹೀಗೆ ಮುಂದುವರೆದರೆ ಮುಂದೆ ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.