ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರೈಲು ರೋಕೋ ಚಳುವಳಿಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ವಿವಿಧ ಜಿಲ್ಲೆಗಳ ರೈಲು ನಿಲ್ದಾಣಗಳಿಗೆ ನುಗ್ಗಿರುವ ರೈತರು ರೈಲು ತಡೆ ನಡೆಸಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಜ್ಯಾದ್ಯಂತ ರೈಲು ತಡೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಮೈಸೂರು, ರಾಯಚೂರು, ಬೆಳಗಾವಿ, ದಾವಣಗೆರೆ, ತುಮಕೂರು, ಹುಬ್ಬಳ್ಳಿ-ಧಾರವಾಡ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರು ರೈಲ್ವೆ ನಿಲ್ದಾಣಗಳಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಅನ್ನದಾತರು ಹಾಗೂ ಕಾರ್ಮಿಕ ಸಂಘಟನೆಗಳು ರೈಲ್ವೆ ನಿಲ್ದಾಣಗಳ ಬಳಿ ಪ್ರತಿಭಟನೆ ನಡೆಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ, ರೈಲು ನಿಲ್ದಾಣಗಳ ಒಳಗೆ ನುಗ್ಗಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕೆಲ ರೈತರನ್ನು ಪೊಲೀಸರು ಎಳೆದೊಯ್ದಿದ್ದಾರೆ. ಇದರಿಂದಾಗಿ ಪೊಲೀಸರು ಹಾಗೂ ರೈತರ ನಡುವೆ ಮಾತಿನಚಕಮಕಿ ನಡೆದಿದ್ದು, ಪೊಲೀಸರ ದೌರ್ಜನ್ಯವನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.