ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ಉಮೇಶ್ ಕತ್ತಿ ದೇವರ ಹೆಸರಲ್ಲಿ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಬಾಗಲಕೋಟೆ ಜಿಲ್ಲೆ ಬೀಳಗಿ ಶಾಸಕ ಮುರುಗೇಶ್ ನಿರಾಣಿ, ಪರಿಷತ್ ಸದಸ್ಯರಾದ ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಶಾಸಕ ಎಸ್.ಅಂಗಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಪಾಲರು ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಆರ್.ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.