ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ, ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಕಾಂಗ್ರೆಸ್ ಹಾಗೂ ರೈತರು ರಾಜಭವನ ಚಲೋ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಅನ್ನದಾತನ ರಣಕಹಳೆ ಆರಂಭವಾಗಿದ್ದು, ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದು, ಪ್ರತಿಭಟನೆಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ರೈತರನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಭಟನೆ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ರೈತರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆಯುತ್ತಿದ್ದಾರೆ. ಒಂದೊಮ್ಮೆ ಪೊಲೀಸರು ತಡೆದರೆ ಅದೇ ಸ್ಥಳದಲ್ಲಿ ಪ್ರತಿಭಟನೆ ಆರಂಭಿಸಿ. ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿ ಎಂದು ಕರೆ ನೀಡಿದ್ದಾರೆ.