ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆದರೆ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ಸೆಮಿ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಜಾರಿಯಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಾದ ನಿಯಮ ಪಾಲನೆಗೆ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ ಎಂದರು. ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯವಿದೆ. ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕೆ ಮಾತ್ರ ಸೀಮಿತಗೊಳಿಸಿ ಆಚರಿಸಬೇಕಿದೆ. ರಾಜ್ಯದಲ್ಲಿ ಲಸಿಕೆ ಅಭಿಯಾನ ಚುರುಕುಗೊಳಿಸಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆ ಮೀಸಲಿಡಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ಆದರೂ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿದೆ ಹಾಗಾಗಿ ಮುನ್ನೆಚ್ಚರಿಕಾ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಾಣಿಜ್ಯ ಚಟುವಟಿಕೆಗಳನ್ನು ನಿಯಂತ್ರಿಸುವ ಅಗತ್ಯವಿಲ್ಲ. ಮುಂದಿನ 15 ದಿನಗಳ ಕಾಲ ಶಾಲೆಗಳನ್ನು ನಡೆಸುವುದು ಬೇಡ ಎಂದು ನಿರ್ಧರಿಸಲಾಗಿದೆ. ನೌಕರರಿಗೆ ಕಡಿಮೆ ಅವಧಿಗೆ ಕೆಲಸದ ಪಾಳಿಗಳನ್ನು ನಿಡಬೇಕು ಎಂದು ಹೇಳಿದರು.