
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಶುಕ್ರವಾರ ಒಂದೇ ದಿನ 994 ಸೋಂಕು ಪ್ರಕರಣಗಳು ವರದಿಯಾಗಿದೆ.
ಇದರ ಮಧ್ಯೆ ಕೊರೊನಾ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಕೊರೊನಾ ವಾರಿಯರ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೂ ಇದರ ಬಿಸಿ ತಟ್ಟಿದೆ ಎನ್ನಲಾಗಿದೆ.
ಕೊರೊನಾ ಪಾಸಿಟಿವ್ ಬಂದ ವೇಳೆ ಅಂತವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ವಿಳಂಬ ಮಾಡಲಾಗುತ್ತಿದೆ. ಅಲ್ಲದೆ ಸ್ವತಃ ರೋಗಿಗಳೇ ಹೋದ ವೇಳೆ ಕೆಲವೊಂದು ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ ಎಂಬ ಉತ್ತರ ಬರುತ್ತಿದೆ ಎಂದು ಹೇಳಲಾಗಿದೆ.
ಕೊರೊನಾ ಇನ್ನೂ ಪ್ರಾಥಮಿಕ ಹಂತದಲ್ಲಿದ್ದ ಸಂದರ್ಭದಲ್ಲಿ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಹೀಗೆ ಸಿಕ್ಕ ಸಮಯಾವಕಾಶದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದರೆ ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಸರ್ಕಾರಕ್ಕೆ ಸಾಕಷ್ಟು ಕಾಲಾವಕಾಶ ಸಿಕ್ಕಿದ್ದರೂ ಸಹ ಸೂಕ್ತ ಸಿದ್ಧತೆ ಮಾಡಿಕೊಂಡಿಲ್ಲದ ಕಾರಣ ಸಾರ್ವಜನಿಕರು ಪರಿತಪಿಸುವಂತಾಗಿದೆ. ಕೊರೊನಾ ಸೋಂಕು ಈಗ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ತರಾತುರಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಲಾದರೂ ಪರಿಸ್ಥಿತಿ ಸುಧಾರಿಸಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.