ಉಡುಪಿ: ಕರಾವಳಿ ಜಿಲ್ಲೆ ವರುಣನ ಆರ್ಭಟಕ್ಕೆ ಸಂಪೂರ್ಣ ತತ್ತರಗೊಂಡಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ಸೋಮವಾರ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮಂಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿವೆ. ಹಲವೆಡೆ ಭೂ ಕುಸಿತ ಉಂಟಾಗಿದೆ. ಹವಾಮಾನ ಇಲಾಖೆ ಸೆ.22ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ವಿಶ್ವ ವಿದ್ಯಾಲಯ ಸೋಮವಾರ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.
ಇನ್ನು ಧಾರಾಕಾರ ಮಳೆಗೆ ಕಾರ್ಕಳ ಬಳಿಯ ಮಾಳಘಾಟಿಯಲ್ಲಿ ಗುಡ್ಡ ಕುಸಿತವುಂಟಾಗಿದೆ. ಬಿರುಗಾಳಿ ಮಳೆಗೆ ಇಲ್ಲಿನ ಎಸ್ ಕೆ ಬಾರ್ಡರ್ ತಿರುವಿನಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಮರ ತೆರವು ಮಾಡಿದ ಕೆಲ ಹೊತ್ತಲ್ಲೇ ಗುಡ್ಡ ಕುಸಿತವುಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.