ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಸರ್ಕಾರಕ್ಕೂ ತಲೆ ಬಿಸಿಯನ್ನುಂಟು ಮಾಡಿದೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಜೊತೆಗೆ ಆಹಾರ ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಕೋವಿಡ್ ಉಸ್ತುವಾರಿ ವಹಿಸಿಕೊಂಡಿರುವ ಕಂದಾಯ ಸಚಿವ ಆರ್. ಅಶೋಕ್ ಶನಿವಾರದಂದು ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಹಾಗೂ ಶಾಸಕ ಜಮೀರ್ ಅಹಮದ್ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ರೋಗಿಗಳಿಗೆ ನೀಡುವ ಆಹಾರ ತರಿಸಿಕೊಂಡು ಪರಿಶೀಲಿಸಿದ ಸಚಿವ ಆರ್. ಅಶೋಕ್ ಅಲ್ಲಿಯೇ ಊಟ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ತಾಜ್ ಹಾಗೂ ಏಟ್ರಿಯಾ ಹೋಟೆಲ್ ನಿಂದಲೇ ಪೌಷ್ಟಿಕಾಂಶ ಊಟ ನೀಡಲಾಗುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಎರಡು ಪಾಳಿಯಲ್ಲಿ ಪ್ರತಿ ವಾರ್ಡ್ ಗೆ ಭೇಟಿ ನೀಡಿ ಚಿಕಿತ್ಸೆ ನೀಡುತ್ತಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.