ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸುವಲ್ಲಿ ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆ ನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ತಾವು ಬಯಸಿದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ವಿಧಾನಪರಿಷತ್ತಿಗೆ ನಡೆದ ಐವರ ನಾಮನಿರ್ದೇಶನದಲ್ಲೂ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ.
ಸರ್ಕಾರ ರಚನೆಯ ಸಂದರ್ಭದಲ್ಲಿ ತಾವು ಕೊಟ್ಟ ಮಾತಿನಂತೆ ಎಚ್. ವಿಶ್ವನಾಥ್ ಹಾಗೂ ಸಿ.ಪಿ. ಯೋಗೇಶ್ವರ್ ಅವರನ್ನು ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಲು ಯಡಿಯೂರಪ್ಪನವರು ಯಶಸ್ವಿಯಾಗಿದ್ದು, ಜೊತೆಗೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಭಾರತಿ ಶೆಟ್ಟಿಯವರೂ ಅವಕಾಶ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಶಾಂತಾರಾಮ ಸಿದ್ದಿ ಹಾಗೂ ಡಾ. ಸಾಬಣ್ಣ ತಳವಾರ ನಾಮ ನಿರ್ದೇಶನಗೊಂಡಿದ್ದಾರೆ.
ಇದೀಗ ಸಂಪುಟ ವಿಸ್ತರಣೆಯ ಸವಾಲು ಯಡಿಯೂರಪ್ಪನವರ ಮುಂದಿದ್ದು, ಈಗ ವಿಧಾನಪರಿಷತ್ತಿಗೆ ಆಯ್ಕೆಯಾದವರ ಪೈಕಿ ನಾಲ್ಕಕ್ಕೂ ಅಧಿಕ ಮಂದಿ ಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ ಎನ್ನಲಾಗಿದೆ. ಆದರೆ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿರುವುದರಿಂದ ಇದೇ ಕಾರಣವನ್ನು ಮುಂದಿಟ್ಟುಕೊಂಡು ಸದ್ಯಕ್ಕೆ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಹೇಳಲಾಗಿದೆ.