ಬೆಂಗಳೂರು: ಇಂದಿನಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಮೂರೇ ದಿನಕ್ಕೆ ಮೊಟಕುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, 60-70 ಶಾಸಕರು ಕೊರೊನಾ ಸೋಂಕಿನಿಂದ ಬಳಲುತ್ತಿರುವುದರಿಂದ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜನಪ್ರತಿನಿಧಿಗಳು ಕೊವಿಡ್ ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅಧಿವೇಶನದ ಅವಧಿ ಮೊಟಕುಗೊಳಿಸುವ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರ ಸೂಚನೆಗೆ ಕಾಯುತ್ತಿದ್ದೇನೆ. ವರಿಷ್ಠರು ಸೂಚಿಸಿದ ಕೂಡಲೇ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದರು.