ರಾಜ್ಯಸಭಾ ಚುನಾವಣೆ ಟಿಕೆಟ್ ನೀಡಿಕೆ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಈ ಬೆಳವಣಿಗೆಯಿಂದಾಗಿ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕರುಗಳಿಗೆ ಆತಂಕ ಶುರುವಾಗಿದೆ.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಆರ್. ಶಂಕರ್, ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ತಮಗೆ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಅಲ್ಲದೇ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಪೂರಕ ಭರವಸೆ ನೀಡಿದ್ದರೆನ್ನಲಾಗಿದೆ.
ಆದರೆ ರಾಜ್ಯಸಭಾ ಚುನಾವಣೆ ಟಿಕೆಟ್ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಪಟ್ಟಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಜೊತೆಗೆ ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ಟಿಕೆಟ್ ನೀಡಿದ್ದು, ವಿಧಾನಪರಿಷತ್ ಚುನಾವಣೆಗೂ ಇದೇ ಮಾನದಂಡ ಅನುಸರಿಸಿದರೆ ತಮ್ಮಗಳ ಮುಂದಿನ ರಾಜಕೀಯ ಭವಿಷ್ಯವೇನು ಎಂಬ ಚಿಂತೆ ಈ ಮೂವರು ಮಾಜಿ ಶಾಸಕರನ್ನು ಕಾಡುತ್ತಿದೆ ಎನ್ನಲಾಗಿದೆ.