ಬೆಂಗಳೂರು: ಕೊರೊನಾ ಎರಡನೇ ಅಲೆ ವೇಗ ಹೆಚ್ಚಿದೆ. ಪರಿಸ್ಥಿತಿ 3ನೇ ಅಲೆಗೆ ಹೋಗಬಾರದು ಎನ್ನುವುದಾದರೆ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಜನರು ಜಾಗೃತರಾಗಿರಬೇಕು. ಸೋಂಕು ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್, ರೆಮ್ ಡಿಸಿವಿರ್ ಪೂರೈಕೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಇದರ ಫಲಿತಾಂಶ ಈಗಲೇ ತಿಳಿಯುವುದಿಲ್ಲ. ಇನ್ನೂ 10-14 ದಿನಗಳು ಕಳೆದ ಬಳಿಕ ಗೊತ್ತಾಗಲಿದೆ. ಕರ್ಫ್ಯೂ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.