ಬಹುದಿನಗಳಿಂದ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಸಿಹಿಸುದ್ದಿ ನೀಡಿದೆ. ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆ ಸಂಜೆಯೊಳಗಾಗಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ ಐದು ಮಂದಿ, ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ.
ಇನ್ನುಳಿದ ಮೂರು ಸ್ಥಾನಗಳಿಗಾಗಿ ಭಾರಿ ಪೈಪೋಟಿ ಏರ್ಪಟ್ಟಿದ್ದು, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಮೊದಲಾದವರ ಹೆಸರುಗಳು ಕೇಳಿಬರುತ್ತಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿ ಯಡಿಯೂರಪ್ಪನವರ ಸಂಪುಟಕ್ಕೆ ಯಾರೆಲ್ಲ ಸೇರ್ಪಡೆಗೊಳ್ಳಬೇಕೆಂಬ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.