ಭಾನುವಾರದಂದು ಚಿತ್ರದುರ್ಗದಲ್ಲಿ ಅನಾರೋಗ್ಯಕ್ಕೊಳಗಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈಗ ಚೇತರಿಸಿಕೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಸದಾನಂದ ಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರಲ್ಲದೇ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಇಂದು ಮಧ್ಯಾಹ್ನ 1-40 ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿದ್ದರೆನ್ನಲಾಗಿದ್ದು, ಎರಡರಿಂದ ಮೂರು ನಿಮಿಷಗಳ ಕಾಲ ಅವರೊಂದಿಗೆ ಮಾತನಾಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ ಬೆಂಗಳೂರಿಗೆ ಹಿಂದಿರುಗುವ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರಿಗೆ ಸ್ಥಳೀಯ ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ಇದೀಗ ಸದಾನಂದ ಗೌಡ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.