ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯದಂತೆ ರಾಜ್ಯ ಸರ್ಕಾರಕ್ಕೆ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾಹಿತಿ ಆಧರಿಸಿ ಅಕ್ಟೋಬರ್ 15ರ ಬಳಿಕ ಶಾಲೆ ತೆರೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಸಧ್ಯಕ್ಕೆ ಶಾಲೆ ತೆರೆಯುವುದು ಬೇಡ ಎಂದು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷ 47 ಸಾವಿರಕ್ಕೂ ಅಧಿಕವಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 9 ಸಾವಿರಕ್ಕೂ ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಿದರೆ ಮಕ್ಕಳಿಗೆ ಶಾಲೆಗಳಲ್ಲಿ ಸೋಂಕು ವೇಗವಾಗಿ ಹರಡುತ್ತದೆ. ಇದರಿಂದ ಮಕ್ಕಳಿಗೆ ಅಪಾಯ ಹೆಚ್ಚು ಮಕ್ಕಳ ಸುರಕ್ಷತೆ ಬಗ್ಗೆ ಯೋಚಿಸುವುದು ಒಳಿತು. ಈ ಕಾರಣದಿಂದಾಗಿ ಅಕ್ಟೋಬರ್ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದು ಬೇಡ. ನವೆಂಬರ್ ನಂತರ ಕ್ಷೇತ್ರವಾರು ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ನಿರ್ಧರಿಸುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ ಎನ್ನಲಾಗಿದೆ.