ಬೆಂಗಳೂರು: ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅನ್ನದಾತರು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಪ್ರತಿಭಟನೆಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡಿವೆ. ಕುರಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದ ರೈತ ಮುಖಂಡರು ಈ ಪ್ರತಿಭಟನೆ ನೇತೃತ್ವ ವಹಿಸಿದ್ದಾರೆ.
ಈ ವೇಳೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮೋದಿಯವರು ತಾನು ರೈತನ ಮಗ ಎನ್ನುತ್ತಾರೆ. ರೈತರ ಸಂಕಷ್ಟದ ಅರಿವಿದ್ದರೆ ಅವರು ರೈತರಿಗೆ ಮಾರಕವಾದಂತಹ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕೃಷಿ ಮಸೂದೆಗಳಂತಹ ಕಾಯ್ದೆ ಜಾರಿಗೆ ತರುತ್ತಿರಲಿಲ್ಲ. ಕೊರೊನಾದಂತಹ ಈ ಸಂದರ್ಭದಲ್ಲಿ ರೈತರ ಸಂಕಷ್ಟವನ್ನು ಆಲಿಸುವವರಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸರ್ಕಾರದ ವಿರುದ್ಧ ರೈತರ ಈ ಪ್ರತಿಭಟನೆ ವಿಧಾನಮಂಡಲ ಅಧಿವೇಶನ ಮುಗಿಯುವವರೆಗೂ ಅಹೋರಾತ್ರಿ ನಡೆಯಲಿದೆ ಎಂದು ತಿಳಿಸಿದ್ದಾರೆ.